ಇಲಾಖೆಯ ಹಿನ್ನೆಲೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಕರ್ನಾಟಕ ಸರ್ಕಾರವು 1977ರಲ್ಲಿ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಜನಾಂಗವನ್ನು ಗುರುತಿಸಿ, ಅವರ ಕ್ಷೇಮಾಭಿವೃದ್ಧಿಗಾಗಿ ಪ್ರತ್ಯೇಕವಾದ “ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ” ಯನ್ನು ಸೃಜಿಸಿದ್ದು, ಭಾರತ ಸಂವಿಧಾನದ ಅನುಚ್ಛೇದ 15(4) ರಡಿಯಲ್ಲಿ ಶೈಕ್ಷಣಿಕ ಹಾಗೂ 16(4) ರಡಿಯಲ್ಲಿ ಔದ್ಯೋಗಿಕ ಮೀಸಲಾತಿ ಸೌಲಭ್ಯ ನೀಡಿಕೆಗೆ ಅವಕಾಶ ಕಲ್ಪಿಸಿರುತ್ತದೆ. 1999-2000ರಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬೇರ್ಪಟ್ಟು ಪ್ರತ್ಯೇಕ ನಿರ್ದೇಶನಾಲಯವನ್ನು ಹೊಂದಿರುತ್ತದೆ. ಪ್ರಸ್ತುತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತ್ಯೇಕ ಆಯುಕ್ತಾಲಯ ಹೊಂದಿದ್ದು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ, ಶೈಕ್ಷಣಿಕ ಪ್ರೋತ್ಸಾಹ ಹಾಗೂ ಆರ್ಥಿಕ ನೆರವು ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರಾಜ್ಯವಲಯ ಹಾಗೂ ಜಿಲ್ಲಾ ವಲಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುತ್ತಾರೆ.